ಉದಯವಾಹಿನಿ, ಕೊಡಗು: ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿದರ್ೇಶನ ನೀಡಿದ್ದಾರೆ.
ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
