ಉದಯವಾಹಿನಿ, ಬೆಂಗಳೂರು: ಪಂಚಖಾತ್ರಿ ಯೋಜನೆಗಳು ಅಬಾಧಿತವಾಗಿ ಮುಂದುವರೆಯಲಿವೆ. ಅವುಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ಉತ್ತರ ನೀಡಲಿದ್ದೇವೆ ಎಂದು ಸವಾಲು ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮಿ ಫಲಾನುಭವಿಗಳನ್ನು ಸಂಘಟಿಸಿ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸುವುದಾಗಿ ಘೋಷಿಸಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪಂಚಖಾತ್ರಿ ಯೋಜನೆಗಳಷ್ಟೇ ಅಲ್ಲದೆ ಕಲ್ಯಾಣ ಯೋಜನೆಗಳಿಗೆ 13 ಸಾವಿರ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂ. ಪಡೆಯುತ್ತಿರುವ ಫಲಾನುಭವಿಗಳನ್ನು ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳನ್ನು ಸಂಘಟಿಸುವ ಮೂಲಕ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಿ ವರಮಾನ ತರುವ ಚಟುವಟಿಕೆಗಳಲ್ಲಿ ತೊಡಗಿಸಲಾಗುವುದು. ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದಾಗಿಹೇಳಿದ್ದಾರೆ.
ಶಕ್ತಿ ಯೋಜನೆಯಡಿ 270 ಕೋಟಿ ಉಚಿತ ಪ್ರಯಾಣ ಸೌಲಭ್ಯ ಪಡೆಯುವ ಮೂಲಕ ಮಹಿಳೆಯರು 6,541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚವನ್ನು ಉಳಿತಾಯ ಮಾಡಿದ್ದಾರೆ. 120 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 25,259 ಕೋಟಿ ರೂ.ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ.
