ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಈ ನಿಟ್ಟಿನಲ್ಲಿ ಬಹಳ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ. ನಾವು ಮಹಾತಗಾಂಧಿಜೀಯವರ ಅಹಿಂಸಾ ತತ್ವವನ್ನು ಪಾಲನೆ ಮಾಡುತ್ತೇವೆ. ಅದೇ ಮಾದರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಸಂದೇಶ ರವಾನಿಸಲು ಯತ್ನಿಸುತ್ತೇವೆ ಎಂದರು.

ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಇಲ್ಲದೆ ಇರುವ ವಿವಾದವನ್ನು ಸೃಷ್ಟಿಸಿ, ದೊಡ್ಡ ಸರ್ಕಾರವನ್ನು ಪತನಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ಷೇಪಿಸಿದ ಅವರು, ಅಖಿಲ ಭಾರತ ಮಟ್ಟದಲ್ಲಿ ಇದೇ ವಿಚಾರವಾಗಿ ಪ್ರತಿಭಟನೆ ನಡೆಸುವ ಬಗ್ಗೆ ನಮಗೆ ಮಾಹಿತಿ ಇಲ್ಲ. ರಾಜ್ಯದ ಪಕ್ಷದ ವಿಚಾರವಾಗಿ ನಾನು ಮಾತನಾಡಬಲ್ಲೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!