ಉದಯವಾಹಿನಿ, ಬೆಂಗಳೂರು:  ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದರೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಹರತಾಳಗಳು ನಡೆದಿವೆ.
ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ.ಜೊತೆಗೆ ಇ-ಮೇಲ್‌ ಮೂಲಕವೂ ದೂರುಗಳ ಸುರಿಮಳೆಗೈಯ್ಯಲಾಗಿದೆ. ರಾಜ್ಯಪಾಲರು ರಾಜಕೀಯ ಕೈಗೊಂಬೆಯಂತೆ ವರ್ತಿಸಿದ್ದು, ನಿಯಮಬಾಹಿರವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್‌‍ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರಕ್ಕೆ ರಾಜಭವನ ದುರ್ಬಳಕೆಯಾಗುತ್ತಿದೆ ಎಂದು ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!