ಉದಯವಾಹಿನಿ,ಬೆಳಗಾವಿ, : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಮೊದಲ ಸುತ್ತಿನಲ್ಲೇ ಎಂಟು ಮಂದಿ ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಸಚಿವ ಸ್ಥಾನದ ಆಕಾಂಕ್ಷಿಗಳು ಸಂಪುಟ ವಿಸ್ತರಣೆಗೆ ತುದಿಗಾಲಲ್ಲಿ ನಿಂತಿದ್ದಾರೆ.ಅವರಲ್ಲಿ ಹಲವರು ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಜೊತೆ ಮಾತುಕತೆಯನ್ನು ಮಾಡುತ್ತಿದ್ದಾರೆ. ಆದರೆ, ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮಹತ್ವದ ಮಾನದಂಡವನ್ನು ಅನುಸರಿಸುತ್ತಿದೆ.2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ, ಆಯಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಸಾಮಾರ್ಥ್ಯವುಳ್ಳ ಶಾಸಕರಿಗೆ ಮಾತ್ರ ಮಂತ್ರಿ ಪಟ್ಟ ನೀಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಅಂತರದಿಂದ ಗೆದ್ದಿರುವ ಕೆಲವು ಶಾಸಕರನ್ನು ಸಚಿವ ಸ್ಥಾನಕ್ಕಾಗಿ ಆಯ್ಕೆ ಮಾಡುವ ಕಸರತ್ತು ನಡೆಯುತ್ತಿದೆ. ಗರಿಷ್ಠ ಸಂಖ್ಯೆಯ ಲೋಕಸಭೆ ಸ್ಥಾನಗಳನ್ನು ಗೆಲ್ಲಲು ಪಕ್ಷವು ಕಾರ್ಯತಂತ್ರವನ್ನು ರೂಪಿಸುತ್ತಿದೆ. ಸಾರ್ವತ್ರಿಕ ಚುನಾವಣೆಗೆ ಸಮೀಕರಣಗಳು ಭಿನ್ನವಾಗಿರುತ್ತವೆ ಎಂದು ಕಾಂಗ್ರೆಸ್‌ಗೆ ತಿಳಿದಿದೆ. ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನಡೆದುಕೊಂಡ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ನಡೆದುಕೊಳ್ಳಲಾರರು ಎಂದೂ ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
