ಉದಯವಾಹಿನಿ, ಬೆಳಗಾವಿ: ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಬೆಳಗಾವಿ ಅಥವಾ ಬೇರೆ ಜೈಲಿಗೆ ಸ್ಥಳಾಂತರಿಸುವ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಕರಣದಲ್ಲಿ ಪರ-ವಿರೋಧ ಎಂಬ ಚರ್ಚೆಯಿಲ್ಲ. ಅಧಿಕಾರಿಗಳ ಕಡೆಯಿಂದ ಲೋಪಗಳಾಗಿವೆ. ಏಳು ಜನರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ ಎಂದರು.
ಗೃಹಸಚಿವರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇದಕ್ಕೆ ಅವಕಾಶ ಮಾಡಿಕೊಟ್ಟಿರುವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮತ್ತಷ್ಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ಹೇಳಿದರು.

ದರ್ಶನ್ನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಚಿಂತನೆ ಇದೆ. ಅಧಿಕಾರಿಗಳು ಹಣ ಪಡೆದು ಸೌಲಭ್ಯ ಒದಗಿಸಿದ್ದಾರೋ ಏನೋ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರೆ ಅವರನ್ನೂ ಅಮಾನತುಗೊಳಿಸಲು ಗೃಹಸಚಿವರು ವರದಿ ಪಡೆಯುತ್ತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವ ನೈತಿಕತೆ ಹೊಂದಿಲ್ಲ. ಅವರು ಬಡವರ ಪರವಾಗಿದ್ದಾರೋ, ಶ್ರೀಮಂತರ ಪರವಾಗಿದ್ದಾರೋ ಎಂಬುದನ್ನು ಸ್ಪಷ್ಟಪಡಿಸಬೇಕು. ನಮ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರ ಪರವಾಗಿದೆ. ಪ್ರಹ್ಲಾದ್ ಜೋಷಿ ಬಡವರ ಪರವಾಗಿ ಏನು ಕಾರ್ಯಕ್ರಮ ರೂಪಿಸಿದ್ದಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಎಂದು ಇದೇ ವೇಳೆ ಸವಾಲು ಹಾಕಿದರು. ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಗೃಹಸಚಿವರು ಇಂದು ಜೈಲಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿಂದ ಅವರು ಪಡೆಯುವ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆಯ ಬದಲಾಗಿ ಹಳೇ ಪಿಂಚಣಿಯನ್ನೇ ಮರುಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಹಾಗೆಯೇ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಕುರಿತಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!