ಉದಯವಾಹಿನಿ,ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದುರ್ಬಲವಾಗಿದ್ದ ಮುಂಗಾರು ಪ್ರಬಲವಾಗಿದ್ದು, ರಾಜ್ಯದಲ್ಲೆಡೆ ಮುಂದಿನ ನಾಲ್ಕೈದು ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಂಭವ ಇದೆ.
ಶಿವಮೊಗ್ಗದ ಆಗುಂಬೆ, ಯಾದಗಿರಿಯ ಭೀಮರಾಯನಗುಡಿ, ದಕ್ಷಿಣ ಕನ್ನಡದ ಮಂಗಳೂರು, ಚಿಕ್ಕಬಳ್ಳಾಪುರ ಹಾಗೂ ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ ಸೇರಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸೆ.5ರಿಂದ ಸೆ.8ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಸೆ.5ರಂದು ಯೆಲ್ಲೋ ಅರ್ಲಟ್ ಇರಲಿದೆ.ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ.
