ಉದಯವಾಹಿನಿ, ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಗಾಗಿ 5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಅಭಿವೃದ್ಧಿಯ ನವಕ್ರಾಂತಿಯನ್ನು ನಿರೀಕ್ಷಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿಯ ಜಾರಿಯ ದಶಮಾನೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ವರ್ಷ ಉತ್ತಮ ಮಳೆಯಾಗಿದ್ದು, ಪ್ರಕೃತಿಯ ಆಶೀರ್ವಾದದಿಂದ ರೈತರಲ್ಲಿ ಸಂತಸ ಮೂಡಿದೆ ಎಂದರು. 2013 ರಿಂದ ಈವರೆಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 19,778 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದ್ದು, 13,229 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಈವರೆಗೂ 11,174 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು.
ಬಿಡುಗಡೆಯಾದ ಅನುದಾನಕ್ಕೆ ಶೇ.85 ರಷ್ಟು ಮಂಡಳಿ ಆರ್ಥಿಕ ಪ್ರಗತಿಯನ್ನು ಸಾಧಿಸಿದೆ ಒಟ್ಟಾರೆ 35,885 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 27,164 ಕಾಮಗಾರಿಗಳು ಪೂರ್ಣಗೊಂಡಿವೆ. 8,621 ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ ಎಂದು ವಿವರಿಸಿದರು.
ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿತ್ತು. ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ್ಯದ ಬೆಳಕು ಬಂದಿದ್ದು 1948 ರಲ್ಲಿ. ಅಸಂಖ್ಯಾತರ ಹೋರಾಟ, ತ್ಯಾಗ ಬಲಿದಾನದಿಂದ ಸರ್ದಾರ್ ವಲ್ಲಭಾಬಾಯಿ ಪಟೇಲ್, ಜವಹರಲಾಲ್ ನೆಹರೂ ಅವರ ದೂರದೃಷ್ಟಿಯಿಂದಾಗಿ ಕಲ್ಯಾಣ ಕರ್ನಾಟಕ ಭಾಗ ಭಾರತದ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಯಾಗುವಂತಾಯಿತು. ಹೈದರಾಬಾದ್-ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಎಲ್ಲರನ್ನೂ ಸರಿಸುವುದಾಗಿ ಹೇಳಿದರು.ಕಲ್ಯಾಣ ಕರ್ನಾಟಕ ಭಾಗ ಸೂಫಿ ಸಂತರ ಬೀಡಾಗಿದ್ದು, ಕೋಮುಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್-ಕರ್ನಾಟಕ ವಿಮೋಚನಾ ಹೋರಾಟ, ಭಾಷಾವಾರು ಪ್ರಾಂತ್ಯ ರಚನೆ ಹೋರಾಟ, ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಸೇರಿ ನಾಲ್ಕು ಮಹತ್ವದ ಚಳವಳಿಗಳು ನಡೆದಿವೆ. ಈ ಭಾಗವನ್ನು ಬ್ರಿಟಿಷರು ಮತ್ತು ನಿಜಾಮರು ಕಡೆಗಣಿಸಿದ್ದರು. ಹೀಗಾಗಿ ಪ್ರಾದೇಶಿಕ ಅಸಮಾನತೆ ಹೆಚ್ಚಾಗಿತ್ತು. ವಿಶೇಷ ಸ್ಥಾನಮಾನದಿಂದಾಗಿ ಅಭಿವೃದ್ಧಿಯ ವೇಗ ಕಾಣುತ್ತಿದೆ.
