ಉದಯವಾಹಿನಿ, ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ಯೋಜನೆಗಳ ಜಾರಿ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯ ಸಮಸ್ಯೆ ಹೆಚ್ಚು ಇದೆ. ಆರೋಗ್ಯವಂತ ಜನರು ದೇಶದ ಸಂಪತ್ತಾಗಿರುತ್ತಾರೆ. ಆದ್ದರಿಂದ ಈ ಭಾಗದ ಜನರ ಆರೋಗ್ಯ ಸುಧಾರಣೆಗಾಗಿ ಆರೋಗ್ಯ-ಆವಿಷ್ಕಾರ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ವಿವಿಧ ಹಂತದ ಆಸ್ಪತ್ರೆಗಳ ಕಾಮಗಾರಿಗಳನ್ನು ಆರೋಗ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಸಮರ್ಪಕ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನಲ್ಲಿ 220 ಕೋಟಿ ರೂ. ಗಳ ವಿಶೇಷ ಅನುದಾನವನ್ನು ಮಂಡಳಿ ಒದಗಿಸುತ್ತಿದೆ. ಕಲ್ಯಾಣ ಕರ್ನಾಟಕದ ಆಸ್ಪತ್ರೆಗಳಿಗೆ 50 ಹೊಸ ಆಂಬ್ಯುಲೆನ್ಸ್‍ಗಳನ್ನು ಒದಗಿಸಲಾಗುತ್ತಿದೆ ಎಂದರು.
ಕೆ.ಕೆ.ಆರ್.ಡಿ.ಬಿ. ಮಂಡಳಿಯ ಸಂಪೂರ್ಣ ಆರ್ಥಿಕ ನೆರವಿನೊಂದಿಗೆ ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಆಸ್ಪತ್ರೆಯ ಶಾಖಾ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು 262 ಕೋಟಿ ರೂ. ಪರಿಷ್ಕøತ ಅಂದಾಜಿಗೆ ಈಗಾಗಲೆ ಅನುಮೋದನೆ ನೀಡಿದ್ದು, ಅಂತಿಮ ಘಟ್ಟದ ಕೆಲಸ ಭರದಿಂದ ಸಾಗಿದೆ. ಶೀಘ್ರವೇ ಇದನ್ನು ಈ ಪ್ರದೇಶಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಕಲಬುರಗಿಯಲ್ಲಿ 221 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಯ ಮಕ್ಕಳ ಆರೋಗ್ಯ ಘಟಕ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿಯೇ 90 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು 72 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಗಳ ಸಾಮಥ್ರ್ಯದ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ನಿರ್ಮಿಸಲಾಗುತ್ತಿದ್ದು, ಈ ಮೂರು ಆಸ್ಪತ್ರೆಗಳ ಕಾಮಗಾರಿಗೆ ಈ ವರ್ಷ 75 ಕೋಟಿ ರೂ. ಅನುದಾನ ನೀಡಲು ಕೆ.ಕೆ.ಆರ್.ಡಿ.ಬಿ. ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
