ಉದಯವಾಹಿನಿ,ಬೆಂಗಳೂರು: ಚುನಾವಣೆ ವೇಳೆ ನೀಡಲಾಗಿದ್ದ 5 ಗ್ಯಾರಂಟಿಗಳ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ದ್ವೇಷ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಸಮ್ಮಿಶ್ರ ಸರ್ಕಾರದಂತೆ ಕಾಣುತ್ತಿರುವ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರು ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿವೆ. ಅಭಿವೃದ್ಧಿಯತ್ತ ಗಮನಹರಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ಸಚಿವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.
