ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದು, ಇಂದು ತೀರ್ಪು ಪ್ರಕಟವಾಗಿದ್ದು, ಸಿಆರ್‌ಪಿಸಿ ಅಡಿಯೇ ಕಾನೂನ ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಸೂಚಿಸಲಾಗಿದೆ.
ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಹಾಗೂ ಕಾನೂನಿನ ಕುಣಿಕೆ ಎದುರಾಗಿದೆ.ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಹಾಗೂ ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಹೈಕೋರ್ಟ್‌ಗೆ ಸಲ್ಲಿಸಿದ್ದ ರಿಟ್ ಅರ್ಜಿ ಮತ್ತು ಈ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಗಮನಕ್ಕೆ ತಂದರು.
ಜೊತೆಗೆ ಮೈಸೂರಿನ ಕೆಸರೆ ಗ್ರಾಮದಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಸ್ವಾದೀನಪಡಿಸಿಕೊಂಡು ಮೂಲ ಮಾಲೀಕರಿಗೆ ಪರಿಹಾರವನ್ನು ಪಾವತಿಸಲು ಹಣ ಠೇವಣಿ ಇಡಲಾಗಿತ್ತು. ನಿವೇಶನಗಳನ್ನು ಅಭಿವೃದ್ಧಿಪಡಿಸಿ ರಸ್ತೆ, ಪಾರ್ಕ್‌ಗಳನ್ನು ನಿರ್ಮಿಸಲಾಗಿತ್ತು ಎಂದು ವಿವರಿಸಿದರು.
ಮುಡಾ ಸ್ವಾದೀನಪಡಿಸಿಕೊಂಡಿದ್ದ ಭೂಮಿಯನ್ನು ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದಾರೆ. ನಂತರ ತಮ ಸಹೋದರಿ ಹಾಗೂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ದಾನಪತ್ರ ಮಾಡಿಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜು ಅವರಿಂದ ಭೂಮಿ ಖರೀದಿಸಿದ್ದಾರೆ. ಆದರೆ ಇಲ್ಲಿ ದೇವರಾಜು ಭೂಮಿಯ ಮಾಲೀಕರೇ ಅಲ್ಲ ಎಂದು ವಾದಿಸಿದರು.ಭೂಸ್ವಾದೀನ ಪ್ರಕ್ರಿಯೆಗಳು ಪೂರ್ಣಗೊಂಡಿದ್ದ ಜಮೀನನ್ನು ಜಿಲ್ಲಾಡಳಿತ ರಾಜಕೀಯ ಪ್ರಭಾವಕ್ಕೆ ಮಣಿದು ಮತ್ತೊಮೆ ನಿಯಮಬಾಹಿರವಾಗಿ ಭೂಪರಿವರ್ತನೆ ಮಾಡಿದೆ ಎಂದು ವಕೀಲರು ದೂರಿದರು.
