ಉದಯವಾಹಿನಿ, ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ, ಜೀವ ಬೆದರಿಕೆ ಆರೋಪಕ್ಕೆ ಗುರಿಯಾಗಿರುವ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್‌ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರ ವೈಯಾಲಿ ಕಾವಲ್‌ನಲ್ಲಿರುವ ನಿವಾಸ ಹಾಗೂ ಕಚೇರಿ ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌ಐಟಿ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದೆ.
ಎಫ್‌ಎಸ್‌ಎಲ್ ತಂಡದೊಂದಿಗೆ ನಡೆಸಿದ ದಾಳಿ ವೇಳೆ ಮುನಿರತ್ನ ಅವರ ನಿವಾಸದಲ್ಲಿದ್ದ ಹಲವಾರು ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮುನಿರತ್ನ ಅವರು ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚೆಲುವರಾಜು ಎಂಬುವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದರೂ. ಈ ಸಂದರ್ಭದಲ್ಲಿ ಮುನಿರತ್ನ ಚೆಲುವರಾಜು ಅವರಿಗೆ ಬಾಯಿಗೆ ಬಂದಂತೆ ಬಯ್ಯುವ ಆಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಚೆಲುವರಾಜು ಅವರು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಈ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನು ಪಡೆದುಕೊಂಡಿದ್ದಾರೆ. ಬಿಬಿಎಂಪಿಯ ಮಾಜಿ ಸದಸ್ಯ ವೇಲುನಾಯ್ಕರ್, ಮುನಿರತ್ನ ಅವರು ಜಾತಿನಿಂದನೆ ಮಾಡಿದ್ದಾರೆ ಎಂದು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಮಹಿಳೆಯೊಬ್ಬರು ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ಸಂಚಲನ ಮೂಡಿಸಿದ್ದರು.
