ಉದಯವಾಹಿನಿ, ಬೆಂಗಳೂರು: ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಮತ್ತೆ ಆರೋಪಿಸಿದ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ನಾನು ಕೇಳಿರುವ ಪ್ರಶ್ನೆಗಳಿಗೆ ಈ ಅಧಿಕಾರಿ ಉತ್ತರ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ಅಧಿಕಾರಿ ತನ್ನ ಸಹೋದ್ಯೊ ೕಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು? ಎಲ್ಲಿ? ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಯಾವ ಸಂದರ್ಭದಲ್ಲಿ ಇದಕ್ಕೆ ಸರಿಯಾದ ಉತ್ತರ ಕೋಡಬೇಕೋ, ಕೊಡುತ್ತೇನೆ ಎಂದು ಅವರು ಹೇಳಿದರು.
ಅಧಿಕಾರಿ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಅವರು ಅಧಿಕಾರಿ ಸೋಗಿ ನಲ್ಲಿರುವ ಕ್ರಿಮಿನಲ್. ಅವರ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು.ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರ್ಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ.
ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು, ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.
ನನ್ನ ಪ್ರಶ್ನೆಗಳಿಗೆ ಉತ್ತರ ಕೊಡುವ ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು? ಎಲ್ಲಿ ಉತ್ತರ ಕೊಡಬೇಕು? ಎನ್ನುವುದು ನನಗೆ ಗೊತ್ತಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!