ಉದಯವಾಹಿನಿ, ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಬೊಂಬೆ ನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬಳಿಕ ಜೆಡಿಎಸ್ ಅಭ್ಯರ್ಥಿ ಹೆಸರನ್ನು ಪ್ರಕಟಿಸಲಾಗುತ್ತದೆ. ಚುನಾವಣೆ ಘೋಷಣೆಗೂ ಮುನ್ನವೇ ರಾಜಕೀಯವಾಗಿ ಭಾರಿ ಸದ್ದು ಮಾಡುತ್ತಿರುವ ಹಾಗೂ ತೀವ್ರಾ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್- ಜೆಡಿಎಸ್ ನಡುವಿನ ಚುನಾವಣೆ ಸಿದ್ಧತೆ ಬಿರುಸಾಗಿದೆ. ಎರಡೂ ಪಕ್ಷಗಳು ಈ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿವೆ. ಹೀಗಾಗಿ ಈ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ಪದೇ ಪದೇ ಪ್ರವಾಸ ಕೈಗೊಂಡು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದಿದ್ದಾರೆ.ಈ ಕ್ಷೇತ್ರದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂದು ನಿರ್ಧರಿಸಿದ್ದರೂ ಬಹಿರಂಗಪಡಿಸಿಲ್ಲ. ಅಭ್ಯರ್ಥಿ ಆಯ್ಕೆ ಕುರಿತಂತೆ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚಿಸಿದ ಬಳಿಕ ಪಕ್ಷದ ಅಭ್ಯರ್ಥಿ ಪ್ರಕಟಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹೆಚ್.ಸಿ.ಜಯಮುತ್ತು ಅವರ ಹೆಸರು ಈ ಉಪಚುನಾವಣೆಯ ಅಭ್ಯರ್ಥಿ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದೆ. ಸ್ಥಳೀಯರಿಗೆ ಅವಕಾಶ ಮಾಡಿಕೊಟ್ಟರೆ ಅವರು ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ. ಆದರೆ,ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಉಪ ಚುನಾವಣೆಯಲ್ಲಿ ಕಣಕ್ಕಿಳಿಸಬೇಕು ಎಂಬ ಒತ್ತಡವನ್ನು ಕುಮಾರಸ್ವಾಮಿ ಅವರ ಮೇಲೆ ಪದೇ ಪದೇ ತರುತ್ತಿದ್ದಾರೆ.
