ಉದಯವಾಹಿನಿ, ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ವಿಪಕ್ಷಗಳು ಬಹಿಷ್ಕರಿಸಿದ್ದವು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡುತ್ತಾ, ನಾನು ಖಂಡಿತವಾಗಿಯೂ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು.ಅದರಂತೆ ಇಂದು ಮಾಜಿ ಪ್ರಧಾನಿ ನೂತನ ಸಂಸತ್ನಲ್ಲಿ ಉಪಸ್ಥಿತರಿದ್ದರು.ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ನೂತನ ಸಂಸತ್ ಭವನದಲ್ಲಿ ಮಾಜಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ಪ್ರತಾಪ್ ಸಿಂಹ, ಹೊಸ ಸಂಸತ್ ಭವನದ ಉದ್ಘಾಟನೆ ಸಂದರ್ಭದಲ್ಲಿ ಹಿರಿಯ ಚೇತನ, ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ ಪಡೆದುಕೊಂಡೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
