ಉದಯವಾಹಿನಿ, ಗದಗ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಬೆಣ್ಣೆ ಹಳ್ಳ ಮತ್ತು ಮಲಪ್ರಭಾ ನದಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಧಿಕ ಮಳೆಯಿಂದಾಗಿ ಬೆಣ್ಣೆಹಳ್ಳದ ನೀರಿನ ಹರಿವಿನ ಪ್ರಮಾಣ ಒಮ್ಮಿಲೇ ಹೆಚ್ಚಾಗಿ ಅಗಾಧ ಪ್ರಮಾಣದ ಬೆಳೆ ಆಸ್ತಿ ಹಾನಿ ಮಾಡಲಿದೆ. ಅದೇ ತರಹ ಮಲಪ್ರಭಾ ನದಿ ಪ್ರವಾಹದಿಂದಲೂ ಈ ಭಾಗದ ಗ್ರಾಮಗಳಿಗೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಂಭವವಿದೆ. ತಾಲೂಕಾ ಆಡಳಿತಗಳು ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಶಿಸ್ತುಬದ್ಧವಾಗಿ ಯೋಜಿಸಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಪ್ರವಾಹದ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪೀಡಿತವಾಗುವ ಗ್ರಾಮಗಳಲ್ಲಿ ವಾಸಿಸುವ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸೂಚಿಸಬೇಕು. ಅಲ್ಲದೇ ಜನಜಾನುವಾರು ಹಾನಿಯಾಗದಂತೆ ತಡೆಯಲು ಪ್ರಥಮಾದ್ಯತೆ ನೀಡಬೇಕು ಎಂದು ತಹಶೀಲ್ದಾರರಿಗೆ ಪ್ರವಾಹ ಪೀಡಿತ ಪ್ರದೇಶ ವೀಕ್ಷಣಾ ಸಮಯದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು. ಸಾರ್ವಜನಿಕರು ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಮಾಡದಿರುವಂತೆ ತಿಳಿಹೇಳಬೇಕು. ಅಲ್ಲದೇ ವಿದ್ಯುತ್ ಕಂಬಗಳ ಹತ್ತಿರ ಹಾಗೂ ನದಿ ಪಾತ್ರದ ಹತ್ತಿರ ಜನಜಾನುವಾರು ಸುಳಿಯದಂತೆ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ಜಾಗೃತಿ ಮೂಡಿಸಬೇಕು. ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸ್ಥಳೀಯ ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತದೊಂದಿಗೆ ನಿರಂತರ ಸಮನ್ವಯ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಹೇಳಿದರು.

ಬೆಳೆ ಹಾನಿ ಪ್ರದೇಶಕ್ಕೆ ಭೇಟಿ: ನರಗುಂದ ಹಾಗೂ ರೋಣ ತಾಲೂಕುಗಳ ಪ್ರವಾಹ ಹಾಗೂ ಅತೀವೃಷ್ಟಿಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಸರ್ಕಾರದ ಮಾರ್ಗಸೂಚಿಗಳನ್ವಯ ಬೆಳೆ ಹಾನಿಗೊಳಗಾದ ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ಒದಗಿಸಲು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದರು. ನರಗುಂದ ಹಾಗೂ ರೋಣ ತಾಲೂಕಿನ ಬೆಳೆಹಾನಿ ಪ್ರದೇಶಗಳಾದ ಹದಲಿ, ಮೆಣಸಗಿ, ಯಾವಗಲ್, ಬನಹಟ್ಟಿ, ಸುರಕೋಡ, ಹೊಳೆಆಲೂರು ಸೇರಿದಂತೆ ಇನ್ನಿತರೆ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

Leave a Reply

Your email address will not be published. Required fields are marked *

error: Content is protected !!