ಉದಯವಾಹಿನಿ, ಬೆಂಗಳೂರು:  ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಈವರೆಗೂ ಪ್ರತಿಪಾದಿಸುತ್ತಿದ್ದ ಮಾಜಿ ಸಂಸದ ಡಿ.ಕೆ.ಸುರೇಶ್‌ ಇದ್ದಕ್ಕಿದ್ದಂತೆ ಯೂ ಟರ್ನ್‌ ಪಡೆದಿದ್ದು, ಹೈಕಮಾಂಡ್‌ ಮತ್ತು ಪಕ್ಷದ ಪ್ರಮುಖರ
ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ತಿಳಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಪ್ರಮುಖರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮಾಲೋಚನೆ ನಡೆಸಿದ್ದರು. ಆ ವೇಳೆ ಉಪಚುನಾವಣೆಗೆ ಸ್ಪರ್ಧಿಸಬೇಕು ಎಂದು ನನ್ನ ಮೇಲೆ ಒತ್ತಡ ಹೇರಲಾಗಿದೆ. ಸಾಮಾನ್ಯ ಕಾರ್ಯಕರ್ತನಾಗಿ ನಿಮ ನಡುವೆ ಇರಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ನನ್ನ ಭಾವನೆಗಳನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಆದರೆ ನನಗೆ ಪಕ್ಷ ಅನಿವಾರ್ಯ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತಂತೆ ಪಕ್ಷಕ್ಕೆ ನಾನು ನನ್ನ ಅಭಿಪ್ರಾಯಗಳನ್ನು ತಿಳಿಸಿದ್ದೇನೆ. ನಾಮಪತ್ರ ಸಲ್ಲಿಸಲು ಇನ್ನೂ ಐದು ದಿನ ಕಾಲಾವಕಾಶವಿದೆ. ಜೆಡಿಎಸ್‌‍-ಬಿಜೆಪಿಯವರು ಯಾರನ್ನು ಅಭ್ಯರ್ಥಿ ಮಾಡುತ್ತಾರೆ ಎಂದು ಕಾದು ನೋಡುತ್ತೇವೆ. ಆಕಾಂಕ್ಷಿಗಳೆಲ್ಲಾ ಮೊದಲು ನಾಮಪತ್ರ ಹಾಕಲಿ. ಮೂರ್ನಾಲ್ಕು ದಿನಗಳಲ್ಲಿ ಕಾಂಗ್ರೆಸ್‌‍ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ. ಈ ನಡುವೆ ತಾವು ಎಐಸಿಸಿ ಅಧ್ಯಕ್ಷರೂ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇವೆ. ಚನ್ನಪಟ್ಟಣ ಕ್ಷೇತ್ರದ ಜನತೆ ಲೋಕಸಭೆ ಚುನಾವಣೆ ಸೇರಿದಂತೆ ಎಲ್ಲಾ ಸಂದರ್ಭದಲ್ಲೂ ನನಗೆ ಬಲ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಾನು ನಿಮ ಜೊತೆ ಇರುವುದಾಗಿ ನಿನ್ನೆಯ ಸಭೆಯಲ್ಲಿ ಕಾರ್ಯಕರ್ತರಿಗೆ ಭರವಸೆ ನೀಡಿದ್ದೇನೆ ಎಂದರು.

Leave a Reply

Your email address will not be published. Required fields are marked *

error: Content is protected !!