ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತು ಪಾಕಿಸ್ತಾನ ಪ್ರಜೆಗಳ ಶೋಧ ನಡೆಯುತ್ತಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ತಿಳಿಸಿದರು.
ಈ ಸಂಜೆಯೊಂದಿಗೆ ಮಾತನಾಡಿದ ಅವರು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿರುವಂತಹ ಬಾಂಗ್ಲಾ ಪ್ರಜೆಗಳ ಮಾಹಿತಿ ಕಲೆಹಾಕಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಹತ್ತು ಮಂದಿ, ಹಾಸನದಲ್ಲಿ ಮೂವರು ಹಾಗೂ ಶಿವಮೊಗ್ಗದಲ್ಲೂ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.
ಭಾರತಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ನೆಲೆಸಿರುವಂತಹ ಪಾಕಿಸ್ತಾನ ಮತ್ತು ಬಾಂಗ್ಲಾ ಪ್ರಜೆಗಳನ್ನು ಎಲ್ಲಾ ಜಿಲ್ಲೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಎಲ್ಲೆಲ್ಲಿ ವಾಸವಾಗಿದ್ದಾರೆ ಎಂಬುವುದರ ಬಗ್ಗೆ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು ಶೋಧ ಕಾರ್ಯ ಮುಂದುವರೆದಿದೆ ಎಂದು ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಗಣಿ ಪೊಲೀಸರು 19 ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೊಳಪಡಿಸಿ ಇನ್ನಷ್ಟು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವುದಾಗಿ ತಿಳಿಸಿದರು.
