ಉದಯವಾಹಿನಿ, ಬೆಳಗಾವಿ : ಕಿತ್ತೂರು ಉತ್ಸವ-2024 ಹಾಗೂ ಚನ್ನಮ್ಮನ ವಿಜಯೋತ್ಸವದ 200 ನೇ ವರ್ಷದ ಆಚರಣೆಯನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕಿತ್ತೂರಿನ ಇತಿಹಾಸವನ್ನು ರಾಜ್ಯಕ್ಕೆ ಸೀಮಿತಗೊಳಿಸದೇ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಚನ್ನಮ್ಮ ಮುಖ್ಯ ವೇದಿಕೆಯಲ್ಲಿ ಬುಧವಾರ ಜರುಗಿದ ಕಿತ್ತೂರು ಉತ್ಸವ-2024 ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಣಿ ಚನ್ನಮ್ಮನ ಆದರ್ಶಗಳನ್ನು ನಾವೆಲ್ಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕಳೆದ ಸಾಲಿನಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಕಿತ್ತೂರು ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ಮುಂದೆಯೂ ಕೂಡ ಕಿತ್ತೂರು ಅಭಿವೃದ್ಧಿಗೆ ಅನುದಾನ ನೀಡಲಾಗುವುದು ಎಂದರು.
ಕಿತ್ತೂರು ಇತಿಹಾಸ ಅಧ್ಯಯನ ಕೇಂದ್ರವನ್ನು ವಿಜಯಪುರದಿಂದ ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ರಾಣಿ ಚನ್ನಮ್ಮವಿಶ್ವ ವಿದ್ಯಾಲಯವನ್ನು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾತನಾಡಿ, ಕಿತ್ತೂರು ನಾಡು ಸ್ವಾಭಿಮಾನದ ನಾಡಾಗಿದೆ. ಹೆಣ್ಣು ಮಕ್ಕಳು ಮನೆಯಿಂದ ಹೊರಬರದಂತಹ ಕಾಲದಲ್ಲಿ ರಾಣಿಚನ್ನಮ್ಮ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಧೀರ ಮಹಿಳೆಯಾಗಿದ್ದಳು ಎಂದರು. ರಾಜ್ಯ ಸರ್ಕಾರವು ಬಡವರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ವಿಶೇಷವಾಗಿ ಮಹಿಳೆಯರನ್ನು ಆರ್ಥಿಕವಾಗಿ ಸದೃಢ ವಾಗಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲಾಗಿದೆ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಮಾತನಾಡಿ ಕಿತ್ತೂರು ಕೊಟೆಯ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

error: Content is protected !!