ಉದಯವಾಹಿನಿ, ಬೆಂಗಳೂರು : ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಸಕ್ತ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದAತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂದರು. ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಽಯಲ್ಲಿ ಇದು 505.81 ಟಿಎಂಸಿ ಇತ್ತು ಎಂದು ಹೇಳಿದರು.
