ಉದಯವಾಹಿನಿ, ಬೆಂಗಳೂರು: ವಕ್ಫ್ ಭೂಮಿ ವಿಚಾರವಾಗಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡುವುದು, ತಕ್ಷಣವೇ ಗೆಜೆಟ್ ಅಧಿಸೂಚನೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ರಾಜಧಾನಿ ಬೆಂಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬೆಂಗಳೂರಿನ ಕೆಆರ್‌ಪುರಂ ಹೀಗೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಜಿಲ್ಲಾ ಕಚೇರಿ, ತಹಸೀಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಟೀಕೆಗಳ ಸುರಿಮಳೆಗೈದರು.
ಬಳ್ಳಾರಿಯಲ್ಲಿ ವಿಜಯೇಂದ್ರ ಅವರಿಗೆ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಸಂಸದ ಗೋವಿಂದ ಕಾರಜೋಳ ಮತ್ತಿತರರು ಸಾಥ್ ನೀಡಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ನರೇಂದ್ರಮೋದಿ ಅವರು ಈ ಹಿಂದೆ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಏನು ಭವಿಷ್ಯ ನುಡಿದಿದ್ದರೋ ಅದು ಇಂದು ಅಕ್ಷರಶಃ ಸತ್ಯವಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ ಆಸ್ತಿಗಳನ್ನು ಕಿತ್ತುಕೊಳ್ಳುತ್ತದೆ ಎಂದು ಹೇಳಿದ್ದು ಇಂದು ನಿಜವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
