ಉದಯವಾಹಿನಿ, ಧುಲೆ : ಇಂದಿರಾ ಗಾಂಧಿ ಮರಳಿ ಬಂದರೂ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ೩೭೦ನೇ ವಿಧಿ ಮರು ಜಾರಿಯಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ,ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, ೩೭೦ ನೇ ವಿಧಿ ಮರು ಜಾರಿ ಅಸಾಧ್ಯ ಎಂದರು.
ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮಹಾ ವಿಕಾಸ್ ಅಘಾಡಿ ಗುಂಪನ್ನು ಔರಂಗಜೇಬ್ ಅಭಿಮಾನಿಗಳ ಕ್ಲಬ್ ಎಂದು ಬಣ್ಣಿಸಿದ ಶಾ, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಶಿವಾಜಿ ಮಹಾರಾಜ್ ಮತ್ತು ವೀರ್ ಸಾವರ್ಕರ್ ಅವರ ಆದರ್ಶಗಳಿಗೆ ಬದ್ಧವಾಗಿದೆ ಎಂದು ಹೇಳಿದರು.
ಮುಸ್ಲಿಮರಿಗೆ ಮೀಸಲಾತಿ ನೀಡಬೇಕಾದರೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಬೇಕಾಗುತ್ತದೆ. ರಾಹುಲ್ ಬಾಬಾ, ನೀವು ಮಾತ್ರವಲ್ಲ, ನಿಮ್ಮ ನಾಲ್ಕು ತಲೆಮಾರುಗಳು ಬಂದರೂ, ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದು ಶಾ ಹೇಳಿದರು.
