ಉದಯವಾಹಿನಿ, ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಸುರೇಶ್ ಅವರ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರಾಭವ ಹೊಂದುವ ಮೂಲಕ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರ ಸೋಲಿನೊಂದಿಗೆ ಎನ್‌ಡಿಎ ಮೈತ್ರಿಗೆ ಭಾರೀ ಹಿನ್ನಡೆಯಾಗಿದ್ದರೆ, ಆಡಳಿತಾರೂಢ ಕಾಂಗ್ರೆಸ್ ನೆಲೆ ಗಟ್ಟಿಯಾಗಿದೆ. ಜೆಡಿಎಸ್ ಭದ್ರಕೋಟೆ ಬೇಧಿಸಿರುವ ಕಾಂಗ್ರೆಸ್ ರಾಮನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವ ಹೊಂದಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪಕ್ಷೇತರ ಅಭ್ಯರ್ಥಿಯಾಗಿದ್ದ ನಟಿ ಸುಮಲತಾ ವಿರುದ್ಧ ಸೋತ್ತಿದ್ದರು.
ಈಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರೀ ನಿರೀಕ್ಷೆಯೊಂದಿಗೆ ಸ್ಪರ್ಧೆ ಮಾಡಿದ್ದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ,ಶೋಭ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಘಟಾನುಘಟಿ ನಾಯಕರೇ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿ ಮತ ಯಾಚಿಸಿದ್ದರು.
