ಉದಯವಾಹಿನಿ, ಬೆಂಗಳೂರು: ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ವಿದೇಶಿ ಡ್ರಗ್ ಪೆಡ್ಲರ್ ನೊಬ್ಬನನ್ನು ಬಂಧಿಸಿ ೭೭ ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಿದ್ದಾರೆ.
ಆಫ್ರಿಕಾದ ಐವರಿಕೋಸ್ಟ್ ನ ಡ್ರಗ್ ಪೆಡ್ಲರ್ ಕೋವ್ಸೀ ಗೇಲನ್ ಗೇಸನ್(೩೬) ಬಂಧಿತ ಆರೋಪಿಯಾಗಿದ್ದು, ಆತನಿಂದ ೫೧೫ ಗ್ರಾಂ ಎಂಡಿಎಂಎ ಕ್ರಿಸ್ಟಲ್, ೧ ಮೊಬೈಲ್ ೭೭ ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ನ.೨೨ ರಂದು ಸೋಲದೇವನಹಳ್ಳಿ ಆರ್ ಆರ್ ಕಾಲೇಜ್ ರಸ್ತೆಯ ರೈಲ್ವೆ ಗೇಟ್ ಬಳಿ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್‌ನ್ನು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯು ೨೦೧೭ ರಲ್ಲಿ ಬಿಜಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಮೋಜಿನ ಜೀವನ ನಡೆಸುವ ಸಲುವಾಗಿ ಮತ್ತು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸಲು ಪರಿಚಯಸ್ಥ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಎಂಡಿಎಂಎ ಕ್ರಿಸ್ಟಲ್ ಖರೀದಿಸಿ ಒಂದು ಗ್ರಾಂ ಗೆ ೧೨ರಿಂದ ೧೫ ಸಾವಿರದಂತೆ ಹೆಚ್ಚಿನ ಬೆಲೆಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.
