ಉದಯವಾಹಿನಿ,ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವರುಗಳ ಸಭೆ ನಡೆಯಿತು. ಈ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸಿಎಂಗೆ ಪರಮಾಧಿಕಾರ ನಿಡೋದಕ್ಕೆ ಸಚಿವರು ನಿರ್ಧಾರ ಕೈಗೊಂಡಿದ್ದಾರೆ.ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ್ದಂತ ಐದು ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸುವ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದಂತ ಸಭೆಯಲ್ಲಿ, ಐದು ಗ್ಯಾರಂಟಿಗಳ ಜಾರಿಗೆ ಸಿಎಂ ಸಿದ್ಧರಾಮಯ್ಯಗೆ ಪರಮಾಧಿಕಾರಿ ನೀಡಲಾಗಿದೆ.ಇದಷ್ಟೇ ಅಲ್ಲದೆ ನಾಳೆ ಅಧಿಕಾರಿಗಳ ಜೊತೆಗೆ ಮತ್ತೊಂದು ಸುತ್ತಿನ ಸಭೆಯನ್ನು ಐದು ಗ್ಯಾರಂಟಿ ಜಾರಿಗಾಗಿ ನಡೆಸಲಿದ್ದು, ಆ ಬಳಿಕ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವಂತ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.ಇದಲ್ಲದೇ ಐದು ಗ್ಯಾರಂಟಿಗಳ ಬಗ್ಗೆ ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಎಂದು ಪುನರುಚ್ಚರಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಐದು ಗ್ಯಾರಂಟಿಗಳನ್ನು ಸಚಿವ ಸಂಪುಟ ಸಭೆಯ ಬಳಿಕವೇ ಜಾರಿಗೊಳಿಸುತ್ತೀರೋ ಅಥವಾ ಹಂತ ಹಂತವಾಗಿ ಜಾರಿ ಮಾಡುತ್ತೀರೋ ಎಂಬುದಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದಂತ ಅವರು, ನಾವು ಆ ಬಗ್ಗೆ ಎಲ್ಲವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು.ಇಂದಿನ ಸಭೆಯಲ್ಲಿ ಗ್ಯಾರಂಟಿ ಜಾರಿಯ ಬಗ್ಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳೊಂದಿಗೂ ಚರ್ಚಿಸಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಆಧರಿಸಿ ಶುಕ್ರವಾರ 11 ಗಂಟೆಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಈ ಬಳಿಕ ಗ್ಯಾರಂಟಿಯ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
