ಉದಯವಾಹಿನಿ, ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ರಾಜ್ಯದ ೯ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ.ಆದರೆ ಚಳಿಯ ತೀವ್ರತೆ ಕ್ರಮೇಣ ಹೆಚ್ಚುತ್ತಿದೆ. ಮಳೆ ಕಡಿಮೆಯಾಗಿರುವುದರಿಂದ ನೆಮ್ಮದಿಯ ನಿಟ್ಟುಸಿರು ಬಿಡುವ ಮುನ್ನವೇ ರಾಜ್ಯಕ್ಕೆ ಮಳೆಯ ಮುನ್ಸೂಚನೆ ಸಿಕ್ಕಿದೆ. ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ೨೪ ಗಂಟೆಗಳಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ೨೬ ಮತ್ತು ೧೮ ಡಿಗ್ರಿ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಹಲವೆಡೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
