ಉದಯವಾಹಿನಿ, ಬೆಳಗಾವಿ: ಸರ್ಕಾರ ಯಾವುದೇ ಅರ್ಹ ಬಿಪಿಎಲ್ ಕುಟುಂಬದವರ ಪಡಿತರ ಚೀಟಿ ರದ್ದು ಪಡಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ರವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ನವರು ಸದನದಲ್ಲಿ ಉತ್ತರಿಸಿದರು.ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017 ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಬಿಪಿಎಲ್ ಕಾರ್ಡ ಪಡೆಯುವಂತಿಲ್ಲ. ಇದರೊಂದಿಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್ಟಿ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಸಹ ಬಿಪಿಎಲ್ ನಡಿ ಬರುವುದಿಲ್ಲ.

ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ, ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವವರು, ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳನ್ನು ಬಿಪಿಎಲ್ ಪಡಿತರ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.

Leave a Reply

Your email address will not be published. Required fields are marked *

error: Content is protected !!