ಉದಯವಾಹಿನಿ , ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೆ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದು ಒಪ್ಪಲಾಗದು. ಯಾರೇ ಸಭೆ ಸಮಾವೇಶಗಳನ್ನು ಮಾಡಲು ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಯೇಂದ ವಿನಂತಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮವನ್ನು ನಡೆಸಲು ಪಕ್ಷದ ಹಿರಿಯ ಶಾಸಕರು, ಮಾಜಿ ಶಾಸಕರು ಹಾಗೂ ಎಲ್ಲರ ಸಭೆಯನ್ನು ಶೀಘ್ರ ಕರೆಯುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಕೂಡು ಕುಟುಂಬವಿದ್ದಂತೆ. ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ ಕಾರ್ಯಕ್ರಮಗಳು ನಡೆಯಬೇಕೇ ಹೊರತು, ಪಕ್ಷದ ನಿಯಮ ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಯ ಬಯಸುತ್ತೇನೆ ಎಂದು ಪ್ರತ್ಯೇಕ ಸಭೆ ನಡೆಸಿರುವ ಭಿನ್ನ ನಾಯಕರಿಗೆ ಅವರು ಈ ಮೂಲಕ ಸಂದೇಶ ರವಾನಿಸಿದ್ದಾರೆ.
