ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಕಡಿಮೆಯಾಗಿದೆ.ಕೊರೆಯುವ ಚಳಿಗೆ ಜನ ಗಢಗಢ ನಡುಗುತ್ತಿದ್ದಾರೆ.ತಂಪು ಗಾಳಿಯಿಂದಾಗಿ ಚಳಿಯ ತೀವ್ರತೆ ಹೆಚ್ಚಾಗಿದೆ. ಮೈ ಕೊರೆಯುವ ಚಳಿಯ ನಡುವೆಯೇ ಮುಂದಿನ ೪೮ ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ೨೦ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಶೀತ ವಾತಾವರಣವಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ ೨೦ ರಿಂದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಚಾಮರಾಜನಗರ, ಹಾಸನ, ಕೊಡಗು. ಕೋಲಾರ ಮತ್ತು ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆ, ಚಳಿ ಮತ್ತು ಬಿಸಿಲಿನ ವಾತಾವರಣ ಏಕಕಾಲದಲ್ಲಿ ಕಂಡುಬರುತ್ತದೆ. ಅದರಲ್ಲೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಜನರು ಒಟ್ಟಾರೆಯಾಗಿ ಮೂರು ಋತುಗಳನ್ನು ಅನುಭವಿಸುತ್ತಿದ್ದಾರೆ. ಸಮುದ್ರ ಮಟ್ಟದಿಂದ ಉಂಟಾದ ಹವಾಮಾನ ಪರಿಸ್ಥಿತಿಗಳ ಪ್ರಭಾವದಿಂದ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಡಿ.೨೦ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
