ಉದಯವಾಹಿನಿ, ಬೆಂಗಳೂರು : ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತ ರಾಜುಕಪನೂರು ಅವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪ್ರಕರಣವನ್ನುಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್‌ನೋಟ್‌ನಲ್ಲಿ ನಿಮ್ಮ ಪಕ್ಷದ ಶಾಸಕರಾದ ಬಸವರಾಜ ಮತ್ತಿಮಡು ಬಿಜೆಪಿ ನಾಯಕರಾದ ಚಂದು ಪಾಟೀಲ್, ಮಣಿಕಂಠ ರಾಥೋಡ್ ಹಾಗೂ ಶ್ರೀಆಂದೋಲ ಸ್ವಾಮೀಜಿ ಅವರನ್ನು ಹತ್ಯೆ ಮಾಡಲು ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತ ರಾಜುಕಪನೂರಿಗೆ ಸುಫಾರಿ ನೀಡಿರುವ ಆತಂಕಕಾರಿ ಹಾಗೂ ಗಂಭೀರ ಮಾಹಿತಿ ಬಹಿರಂಗವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದ ಶಾಸಕರನ್ನು ಗುರಿಯಾಗಿರಿಸಿಕೊಂಡು ರಾಜ್ಯದಲ್ಲಿ ನಡೆದಿರುವ ಘಟನೆಗಳ ಹಿನ್ನೆಲೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.
