ಉದಯವಾಹಿನಿ, ಬೆಂಗಳೂರು: ಹೊಸ ವರ್ಷದ ಆಚರಣೆ ವೇಳೆ ಯಾವುದೇ ರೀತಿಯ ಅವಘಡಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಹೊಸವರ್ಷ ಹಾಗೂ ಕ್ರಿಸ್ಮಸ್ ಸಂದರ್ಭದಲ್ಲಿ ಮಾದಕವಸ್ತುಗಳ ಸರಬರಾಜು ಹೆಚ್ಚುವ ಸಾಧ್ಯತೆಯಿದ್ದುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು.
ಕಳೆದ ಒಂದು ತಿಂಗಳಿನಿಂದಲೂ ವಿಶೇಷ ಅಭಿಯಾನವನ್ನೇ ಕೈಗೊಂಡು ಮಾದಕವಸ್ತುಗಳ ಸರಬರಾಜು ಹಾಗೂ ಮಾರಾಟವನ್ನು ನಿಯಂತ್ರಿಸಲಾಗಿದೆ ಎಂದರು.
ಜಿಲ್ಲೆಗಳಲ್ಲಿ ಕೂಡ ಮಾದಕವಸ್ತುಗಳ ಜಾಲವನ್ನು ನಿಷ್ಕ್ರಿಯಗೊಳಿಸಲು ಸಾಕಷ್ಟು ಪ್ರಯತ್ನ ನಡೆಸಲಾಗಿದೆ. ಪೊಲೀಸರು ಈ ನಿಟ್ಟಿನಲ್ಲಿ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಹೊಸ ವರ್ಷದ ಆಚರಣೆಗೆ ಯಾವುದೇ ಬೆದರಿಕೆಗಳಿಲ್ಲ. ನಿರಾತಂಕವಾದ ವಾತಾವರಣವನ್ನು ನಿರ್ಮಿಸಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚು ಜನ ಸೇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾಕಷ್ಟು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಏಳೂವರೆ ಸಾವಿರಕ್ಕೂ ಅಧಿಕ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ವಿವರಿಸಿದರು.
