ಉದಯವಾಹಿನಿ, ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಂದು ವಾರಗಳ ವಿದೇಶಿ ಪ್ರವಾಸದ ಬಳಿಕ ಭಾರತಕ್ಕೆ ಮರಳಿದ್ದು, ನೇರವಾಗಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ವಾರದಿಂದ ತೆರೆಮರೆಯಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು ನಡೆದಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಹಿಂದುಳಿದ ವರ್ಗಗಳ ಸಚಿವರು ಪ್ರತ್ಯೇಕವಾಗಿ ಸಭೆ ನಡೆಸಿದ್ದರು.
ಅದರ ಬೆನ್ನಲ್ಲೇ ಒಕ್ಕಲಿಗ ಸಮುದಾಯದ ಶಾಸಕರು, ಸಚಿವರು ಕೂಡ ಸಭೆ ನಡೆಸಿ ಎಸ್.ಎಂ.ಕೃಷ್ಣ ಅವರ ಪುಣ್ಯಸರಣೆ ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಸಮಾಲೋಚನೆ ನಡೆಸಿದ್ದರು. ಮತ್ತೊಂದೆಡೆ ಲಿಂಗಾಯತ ಸಮುದಾಯದ ಸಚಿವರು, ಶಾಸಕರು ಕೂಡ ಸಭೆ ನಡೆಸುವ ತಯಾರಿಯಲ್ಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಮುಖವಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯ ಕುರಿತು ಚರ್ಚೆ ನಡೆದಿತ್ತು. ರಾಜ್ಯ ರಾಜಕಾರಣದಲ್ಲಿ ಆಯೋಗದ ವರದಿ ಸರ್ಕಾರಕ್ಕೆ ಬಿಸಿತುಪ್ಪವಾಗಿದೆ.
