ಉದಯವಾಹಿನಿ, ಬೆಂಗಳೂರು: ಬಿಬಿಎಂಪಿ ಪ್ರಧಾನ ಅಭಿಯಂತರ ಬಿ.ಎಸ್. ಪ್ರಹ್ಲಾದ್ ಕಚೇರಿ ಪರಿಶೀಲನೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಕೂಡ ಮುಂದುವರೆಸಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಪ್ರಧಾನ ಅಭಿಯಂತರ ಪ್ರಹ್ಲಾದ್ ಕಚೇರಿ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಸಂಜೆಯವರೆಗೆ ದಾಖಲೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಹತ್ವದ ಮಾಹಿತಿ ಕಲೆ ಹಾಕಿದ್ದರು.
ಮತ್ತೆ ಕಚೇರಿಗೆ ಆಗಮಿಸಿರುವ ಇಡಿ ಅಧಿಕಾರಿಗಳು ಪ್ರಹ್ಲಾದ್ ಅವರ ಕಚೇರಿಯನ್ನು ಸಂಪೂರ್ಣ ವಶಕ್ಕೆ ಪಡೆದು ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.2016 ರಲ್ಲಿ ನಡೆದಿತ್ತು ಎನ್ನಲಾದ 960 ಕೋಟಿ ರೂ.ಗಳ ಬೋರ್ ವೆಲ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ.
ರಾಜರಾಜೇಶ್ವರಿ ನಗರ ವಲಯ ಸೇರಿದಂತೆ ಹಲವಾರು ವಲಯಗಳಲ್ಲಿ ಬೋರ್ವೆಲ್ ಕೊರೆಸುವುದರಲ್ಲಿ ಭಾರಿ ಗೋಲ್ಮಾಲ್ ನಡೆದಿತ್ತು ಎಂದು ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಹಾಗೂ ಸಾಮಾಜಿಕ ಕಾರ್ಯಕರ್ತ ಅಮರೇಶ್ ಎನ್ನುವವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಅವ್ಯವಹಾರ ನಡೆದಿದೆ ಎನ್ನಲಾದ ಪ್ರದೇಶಗಳಿಂದ ಮೂಟೆಗಟ್ಟಲೆ ಕಡತಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಅವ್ಯವಹಾರ ನಡೆದಿತ್ತು ಎನ್ನಲಾದ ಅವಧಿಯಲ್ಲಿ ಆ ಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಎಂಜಿನಿಯರ್ಗಳನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!