ಉದಯವಾಹಿನಿ, ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಇಂದು ಎಂಟು ಅಧಿಕಾರಿಗಳ ಅಕ್ರಮ ಸಂಪಾದನೆಯನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಬಳ್ಳಾರಿ, ರಾಯಚೂರು, ಗದಗ ಸೇರಿದಂತೆ 25ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಅವರ ನಿವಾಸ ಹಾಗೂ ಎಂಎಸ್ ಬಿಲ್ಡಿಂಗ್ನಲ್ಲಿರುವ ಕಚೇರಿಯಲ್ಲಿ ಬೆಂಗಳೂರು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ. ಶೋಭಾ ಅವರ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪ್ರವೇಶಿಸುತ್ತಿ
ದ್ದಂತೆಯೇ ಬೆಚ್ಚಿಬಿದ್ದ ಕುಟುಂಬಸ್ಥರು ಗಾಬರಿಗೊಂಡಿದ್ದಾರೆ.
ನಂತರ ಪರಿಶೀಲನೆ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಕೆಲ ಆಸ್ತಿ ದಾಖಲೆಗಳು ಪತ್ತೆಯಾಗಿದ್ದು, ಕೆಲವು ಐಷಾರಾಮಿ ವಸ್ತುಗಳ ಮೌಲ್ಯ ಮಾಡಲಾಗುತ್ತಿದೆ. ಇವರು ಹಲವೆಡೆ ಕೃಷಿ ಜಮೀನಿನನ್ನು ಕೂಡ ಹೊಂದಿದ್ದು, ಅದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವೈದ್ಯಾಧಿಕಾರಿ ಡಾ. ಉಮೇಶ್ ಅವರ ನಿವಾಸದಲ್ಲಿ ಪರಿಶೀಲನೆ ವೇಳೆ ಹಲವು ಸರ್ಕಾರಿ ಕಡತಗಳು ಪತ್ತೆಯಾಗಿದೆ. ಇದಲ್ಲದೇ ಅವರು ಕಾರ್ಯನಿರ್ವಹಿಸುತ್ತಿದ್ದ ಕಚೇರಿಯಲ್ಲೂ ಕೂಡ ಕೆಲ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಗೋಲ್ಮಾಲ್ ನೀಡಿದೆ ಎಂದು ದೂರುಗಳ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ದಾಳಿ ನಡೆಸಿದ್ದಾರೆ.
