ಉದಯವಾಹಿನಿ, ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸ್ವತಂತ್ರ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮೇಳನದಲ್ಲಿ ಮಾತನಾಡಿದ ಅವರು, ಜನಕೇಂದ್ರಿತವಾಗಿ ಭವಿಷ್ಯದ ಸವಾಲುಗಳನ್ನು ಎದುರಿಸುವ ಆಡಳಿತ ವ್ಯವಸ್ಥೆಯನ್ನು ಕೆಪಿಎಸ್‌ಸಿ ಅಳವಡಿಸಿಕೊಳ್ಳಬೇಕು. ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ಗುಣಮಟ್ಟದ ಸೇವಾ ತರಬೇತಿ ನೀಡುವ ಅಗತ್ಯವಿದೆ ಎಂದು ಹೇಳಿದ್ದಾರೆ.ಲೋಕಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು ಕಾರ್ಯಾಂಗಕ್ಕೆ ಅಭೂತಪೂರ್ವವಾದ ಕೊಡುಗೆ ನೀಡುವ ಪ್ರಜಾಪ್ರಭುತ್ವದ ಆಧಾರಸ್ತಂಭಗಳಾಗಿವೆ ಎಂದಿದ್ದಾರೆ. 1892 ರಲ್ಲಿ ಮೈಸೂರು ಸಿವಿಲ್ ಸರ್ವಿಸ್ ಪರೀಕ್ಷೆಗಳನ್ನು ಆಗಿನ ದಿವಾನ್ ಕೆ.ಶೇಷಾದ್ರಿ ಅಯ್ಯರ್ ಆರಂಭಿಸುವ ಮೂಲಕ ಸಾರ್ವಜನಿಕ ಸೇವೆಯಲ್ಲಿ ಕರ್ನಾಟಕಕ್ಕೆ ಶ್ರೀಮಂತ ಐತಿಹ್ಯವಿದೆ. ಈ ಮೂಲಕ ವಿಶಿಷ್ಟ ಆಡಳಿತಗಾರರ ಪಡೆಯನ್ನು ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಗಳಿಗೆ ಕರ್ನಾಟಕ ಭದ್ರ ಬುನಾದಿ ಹಾಕಿದ್ದು ಅದೇ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದೆ ಎಂದು ತಿಳಿಸಿದ್ದಾರೆ.
