ಉದಯವಾಹಿನಿ, ಬೆಂಗಳೂರು: ನಗರ ಪೊಲೀಸರು ಕಾರ್ಯಾಚರಣೆ ಕೈಗೊಂಡು 16 ಆರೋಪಿಗಳನ್ನು ಬಂಧಿಸಿ 1 ಕೋಟಿ ರೂ. ಮೌಲ್ಯದ 113 ದ್ವಿಚಕ್ರ ವಾಹನಗಳು, 4 ಆಟೋ ರಿಕ್ಷಾ, 1 ಕಾರು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜಗೋಪಾಲನಗರ: ಕಾರ್ಖಾನೆಯೊಂದರ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ರಾಜಗೋಪಾಲನಗರ ಠಾಣೆ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿ ಆಂಧ್ರಪ್ರದೇಶ ಮೂಲದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಆಂಧ್ರದ ಚಿತ್ತಪ್ಪಗಾರಿ ಆನಂದ(30) ಬಂಧಿತ ಆರೋಪಿ. ಈತ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ. ಆರೋಪಿಯು ನಗರದಲ್ಲಷ್ಟೇ ಅಲ್ಲದೆ ಬೆಂಗಳೂರು ಗ್ರಾಮಾಂತರ ಹಾಗೂ ಇತರ ಜಿಲ್ಲೆಗಳಲ್ಲೂ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದು, ಈತನಿಂದ ಒಟ್ಟು 30 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೌಲ್ಯ 26.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯ ಬಂಧನದಿಂದ ಒಟ್ಟು 21 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, 9 ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ಇನ್ಸ್ಪೆಕ್ಟರ್ ಪುನೀತ್ ಹಾಗೂ ಸಿಬ್ಬಂದಿ ತಂಡ ಪ್ರಕರಣವನ್ನು ಬೇಧಿಸಿದೆ.
ನಂದಿನಿಲೇಔಟ್: ಪಾರ್ಕಿಂಗ್ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ವ್ಯಕ್ತಿಯನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ, 5.81 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನ ಹಾಗೂ ಒಂದು ಆಟೋರಿಕ್ಷಾಗಳನ್ನು ವಶಪಡಿಕೊಂಡಿದ್ದಾರೆ. ಕಳೆದ ಮೇ 14ರಂದು ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಠಾಣೆಗೆ ದೂರು ನೀಡಿದ್ದರು.
ಅಪರಾಧ ವಿಭಾಗದ ಸಿಬ್ಬಂದಿಯವರ ಲಗ್ಗೆರೆಯ ಬ್ರಿಡ್ಜ್ ಬಳಿ ಗಸ್ತಿನಲ್ಲಿದ್ದಾಗ ಈತನನ್ನು ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ, ನಗರದ ಹಲವು ಕಡೆಗಳಲ್ಲಿ ವಾಹನ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾನೆ. ಇನ್ಸ್ಪೆಕ್ಟರ್ ಲಕ್ಷ್ಮಣ್ ಅವರ ತಂಡ ಈ ಕಾರ್ಯಚರಣೆ ಕೈಗೊಂಡಿತ್ತು.
ಗಿರಿನಗರ: ಕಳವು ಮಾಡಿದ ದ್ವಿಚಕ್ರ ವಾಹನಗಳನ್ನು ಖಾಲಿ ಜಾಗವೊಂದರಲ್ಲಿ ನಿಲ್ಲಿಸಿದ್ದ ಆರೋಪಿಯೊಬ್ಬನನ್ನು ಬಂಧಿಸಿ 7.3 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೇ ವ್ಯಾಪ್ತಿಯ ಮತ್ತೊಂದು ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿ 1.95 ಲಕ್ಷ ರೂ ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಇನ್ಸ್ಪೆಕ್ಟರ್ ಸತೀಶ್ಕುಮಾರ್ ನೇತೃತ್ವದ ತಂಡ ಯಶಸ್ವಿಯಾಗಿದೆ.
