ಉದಯವಾಹಿನಿ, ಬೆಂಗಳೂರು: ಚಾಮರಾಜ ಪೇಟೆಯ ವಿನಾಯಕನಗರದ ಪೆನ್ಷನ್ ಮೊಹಲ್ಲಾದಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಇದೊಂದು ಪೈಶಾಚಿಕ ಕೃತ್ಯ. ಅಂದು ಘಟನೆಗೆ ಬೆಳಕಿಗೆ ಬರುತ್ತಿದ್ದಂತೆ ನಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯ ಸಾಕ್ಷ್ಯಗಳು ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ. ತನಿಖೆ ಮುಂದುವರೆದಿದೆ ಎಂದರು.
ಈ ಘಟನೆಯಲ್ಲಿ ಬೇರೆ ಯಾರಾದರೂ ಇದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣವು ತನಿಖಾ ಹಂತದಲ್ಲಿರುವುದರಿಂದ ಇದರ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದರು. ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಅತಿಶೀಘ್ರದಲ್ಲೇ ಬಂಧಿಸಿದ್ದಾರೆ. ಅಲ್ಲದೆ ಡಿಸಿಪಿ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿಸಿದರು.
