ಉದಯವಾಹಿನಿ, ವಾಷಿಂಗ್ಟನ್: ನಾಳೆ ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕದ 47 ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು, ಕ್ಯಾಪಿಟಲ್ ರೊಟುಂಡ ಕಟ್ಟಡದ ಒಳಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ತೀವ್ರ ಚಳಿಯ ಹಿನ್ನೆಲೆಯಲ್ಲಿ ಕಟ್ಟಡದ ಒಳಗೆ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಖುದ್ದು ಡೊನಾಲ್‌್ಡ ಟ್ರಂಪ್ ಅವರೇ ಮಾಹಿತಿ ನೀಡಿದ್ದಾರೆ.
ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್, ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ, ಜಾರ್ಜ್‌ಬುಶ್, ಬಿಲ್ ಕ್ಲಿಂಟನ್ ಸೇರಿ ಹಲವು ಗಣ್ಯರು ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಕೂಡ ಭಾಗವಹಿಸುತ್ತಿದ್ದಾರೆ. ಚೀನಾ ಉಪಾಧ್ಯಕ್ಷ ಹ್ಯಾನ್ ಜೆಂಗ್, ಭಾರತದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ದಂಪತಿ ಸೇರಿದಂತೆ ಇನ್ನೂ ಹಲವು ಅಂತಾರಾಷ್ಟ್ರೀಯ ಗಣ್ಯರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ. ಬಲ ಪಂಥೀಯ ನಾಯಕರಾದ ನಿಗೆಲ್ ಫರಾಜ್ (ಯುಕೆ), ಎರಿಕ್ ಜೆಮೌರ್ (ಫ್ರಾನ್ಸ್ ) ಮತ್ತು ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಭಾಗಿಯಾಗಿವ ಸಾಧ್ಯತೆಯಿದೆ.
