ಉದಯವಾಹಿನಿ, ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಿ ಮಾಡುವ ವೇಳೆ ಕಿರುಕುಳ ನೀಡಿರುವುದು ಗಮನಕ್ಕೆ ಬಂದಿದೆ. ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳ ಹಾವಳಿಯನ್ನು ತಡೆಯಲು ಸುಗ್ರೀವಾಜ್ಞೆಯ ಮೂಲಕ ಕಾನೂನು ತಿದ್ದುಪಡಿ ತರಲು ಇಂದು ಸಭೆ ನಡೆಸಲಾಗುತ್ತಿದೆ.ಹೊಸ ಕಾನೂನಿನಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದರು. ಸುಗ್ರೀವಾಜ್ಞೆಯ ಬಗ್ಗೆ ಇಂದು ಕಾನೂನು, ಕಂದಾಯ ಮತ್ತು ಗೃಹ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಚರ್ಚೆ ನಡೆಸಿ ಕರಡು ಮಸೂದೆಯನ್ನು ಅಂತಿಮಗೊಳಿಸಿ ನಾಳೆಯೇ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆದು ಕಟ್ಟುನಿಟ್ಟಿನ ಸೂಚನೆ ನೀಡಿದ ಬಳಿಕವೂ ಕೆಲವು ಕಡೆ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ಮುಂದುವರೆದಿದೆ ಎಂಬ ಆರೋಪಗಳಿವೆ. ಪೊಲೀಸರು ಇಂತಹ ಪ್ರಕರಣಗಳಲ್ಲಿ ಏಕಾಏಕಿ ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ. ದೂರು ಬಂದರೆ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದರು ಎಂದರು.
