ಉದಯವಾಹಿನಿ, ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರ ನಿರ್ಣಾಯಕ ಹಂತ ತಲು ಪಿದ್ದು, ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಂದುವರೆಯಲಿದ್ದಾರೆಯೇ? ಇಲ್ಲವೆ ಭಿನ್ನಮತೀಯರ ಪಟ್ಟಿನಂತೆ ಬದಲಾಗಲಿದ್ದಾರೆಯೇ ಎಂಬುದು ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಶತಾಯ ಗತಾಯ ವಿಜಯೇಂದ್ರ ಅವರ ಬದಲಾವಣೆಗೆ ಪಟ್ಟು ಹಿಡಿದು ದೆಹಲಿಯಲ್ಲಿ ಬೀಡು ಬಿಟ್ಟಿರುವ ಭಿನ್ನಮತೀಯರು ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವ ಧಾವಂತದಲ್ಲಿದ್ದಾರೆ.
ಕಳೆದ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ರಾಜ್ಯದ ವಸ್ತು ಸ್ಥಿತಿಯನ್ನು ವಿವರಿಸಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಆದರೆ, ಅವರು ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿರುವುದಕ್ಕೆ ನಿದರ್ಶನವಾಗಿ ಫೋಟೋಗಳು ಲಭ್ಯವಿಲ್ಲದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಮಂಗಳವಾರ ಬೆಳಿಗ್ಗೆ ಸಂಸತ್ತಿನಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ , ಕುಮಾರ್ ಬಂಗಾರಪ್ಪ, ಶ್ರೀಮಂತಪಾಟೀಲ್ ಸೇರಿದಂತೆ ಕೆಲವರು ಭೇಟಿಯಾಗಿದ್ದರು.
ಉಳಿದಂತೆ ಭಿನ್ನಮತೀಯರು,ರಾಜ್ಯ ಚುನಾವಣಾ ಉಸ್ತುವಾರಿ ಶಿವರಾಜ್ಸಿಂಗ್ ಚೌವ್ಹಾಣ್ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದರಾದರೂ ಭೇಟಿಗೆ ಅವಕಾಶ ನೀಡಿಲ್ಲ. ರಾತ್ರಿ ವೇಳೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರು ಭಿನ್ನಮತೀಯರನ್ನು ಸೇರಿಕೊಂಡಿದ್ದು, ವರಿಷ್ಠರ ಭೇಟಿಗೆ ಚಾತಕ ಪಕ್ಷಿಯಂತೆ ಎದುರು ನೋಡುತ್ತಿದ್ದಾರೆ.
ಪಕ್ಷದ ಹೈಕಮಾಂಡ್ ಮುಂದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣ ಹಲವು ಬೇಡಿಕೆಯನ್ನು ಇಟ್ಟಿದ್ದಾರೆ. ಇದರ ಜೊತೆಗೆ 23 ಜಿಲ್ಲಾಧ್ಯಕ್ಷರ ಆಯ್ಕೆ ಘೋಷಣೆಯನ್ನು ರದ್ದು ಮಾಡಬೇಕು, ರಾಜ್ಯಾಧ್ಯಕ್ಷರ ಚುನಾವಣೆ ನಡೆಸಬೇಕೆಂಬ ಒತ್ತಡ ಹಾಗೂ ವಿಜಯೇಂದ್ರರನ್ನ ಪಟ್ಟದಿಂದ ಇಳಿಸಬೇಕು ಎಂಬ ಬೇಡಿಕೆಯನ್ನ ಹೈಕಮಾಂಡ್ ಮುಂದೆ ಇಡಲಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ವಿಚಾರದಲ್ಲಿ ಚುನಾವಣೆ ನಡೆಯುವ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣ ಹೈಕಮಾಂಡ್ ನಾಯಕರ ಭೇಟಿಗೆ ತೆರಳಿದ್ದು, ಎರಡು ಮೂರು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದಾರೆ.
