ಉದಯವಾಹಿನಿ, ನವದೆಹಲಿ: ಸಾವಿರಾರು ಜನರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮಾಚಾರಣೆಯ ನಡುವೆಯೇ ರಾಷ್ಟ್ರ ರಾಜಧಾನಿ ನವದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತ ಅವರು ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕಾರ ಮಾಡಿದರು.
ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಸ್ವಂತಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯುವ ಬಹು ದಿನಗಳ ಕನಸು ಕೊನೆಗೂ ನನಸಾಗಿದೆ. 32 ವರ್ಷಗಳ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗುತ್ತಿರುವ 4ನೇ ಮಹಿಳೆ ಅವರು. ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.
ಇದೇ ವೇಳೆ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರವಾಲ್ ಅವರನ್ನು ಸೋಲಿಸಿದ್ದ ಪರ್ವೇಶ್ ವರ್ಮಾ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ ಬಿಜೆಪಿ ಶಾಸಕರಾದ ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿಸಾರ್, ರವೀಂದರ್ ಇಂದ್ರಜ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ದೆಹಲಿಯ ಲೆಫ್ಟಿನೆಂಟ್ ಜನರಲ್ ವಿ.ಕೆ.ಸಕ್ಸೆನಾ ಅವರು ನೂತನ ಸಿ ಎಂ ರೇಖಾ ಗುಪ್ತ ಹಾಗೂ ಇತರರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು. ಎಲ್ಲರೂ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವಿಕಾರ ಮಾಡಿದ್ದು ವಿಶೇಷವಾಗಿತ್ತು. ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಶೇಷ ಎಂದರೆ 2015 ರಲ್ಲಿ ಆಭೂತಪೂರ್ವ ಜನಾದೇಶ ಪಡೆದು, ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದ್ದ ಎಎಪಿಯ ಅರವಿಂದ್ ಕೇಜೋವಾಲ್ ಕೂಡಾ ಇದೇ ಮೈದಾನದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಬಿಜೆಪಿ ಶಾಸಕರ ನಿರ್ಣಾಯಕ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ನಂತರ ಅವರು ಮುಂದಿನ ಸರ್ಕಾರ ರಚಿಸುವ ಹಕ್ಕು ಮಂಡಿಸಿದ್ದರು. ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿರುವ ಸ್ಥಳ ಮತ್ತು ಸುತ್ತಮುತ್ತ 25,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
