ಉದಯವಾಹಿನಿ,ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ( ಮುಡಾ) ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ಪ್ರಕರಣದ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಆರ್‌ಪಿಸಿ ಸೆಕ್ಷನ್‌ 156(3) ಅಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ.
ಈ ಅಧಿಕಾರ ಹೈಕೋರ್ಟ್‌ಗೆ ಸಂವಿಧಾನದ 22ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ಗೆ ಸಂವಿಧಾನದ 32 ಅಥವಾ 142ನೇ ವಿಧಿಯಡಿ ಮಾತ್ರ ಇದೆ ಎಂಬುದನ್ನು ಅರ್ಥೈಸಿಕೊಳ್ಳುವಲ್ಲಿ ಹೈಕೋರ್ಟ್‌ ವಿಫಲವಾಗಿದೆ. ಅಲ್ಲದೇ, ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಬೇರೆ ಯಾವುದಾದರೂ ಸ್ವತಂತ್ರ ತನಿಖಾ ಸಂಸ್ಥೆ ನಡೆಸಬೇಕು ಎಂದು ಆರಂಭದಿಂದಲೂ ಕೋರುತ್ತಿರುವುದಾಗಿ ಸ್ನೇಹಮಯಿ ಕೃಷ್ಣ ವಿವರಿಸಿದ್ದಾರೆ.
ಕಳೆದ ತಿಂಗಳು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ಇದನ್ನು ಪ್ರಶ್ನಿಸಿ ಪ್ರತಿಭಟನಾ ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ವಿಚಾರಣಾ ನ್ಯಾಯಾಲಯದಲ್ಲಿ ವಾದಿಸಿದ್ದರು. ಸ್ನೇಹಮಯಿ ಕೃಷ್ಣ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.
ಪ್ರಕರಣವನ್ನು ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ. ಅವರಿಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು.ಕಳೆದ ಫೆಬ್ರವರಿ 7 ರಂದು ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು, ಲೋಕಾಯುಕ್ತರಿಂದ ಪಕ್ಷಪಾತ ಅಥವಾ ಕಳಪೆ ತನಿಖೆಯನ್ನು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ತೀರ್ಪು ನೀಡಿತ್ತು.

 

Leave a Reply

Your email address will not be published. Required fields are marked *

error: Content is protected !!