ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿರುವ ಬೆನ್ನಲ್ಲೇ, ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಹವಾಮಾನ ಇಲಾಖೆ ಕೂಡ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈ ಹಿನ್ನೆಲೆ ಪೋಷಕರು ತಮ್ಮ ಮಕ್ಕಳಿಗೆ ಬೇಸಿಗೆ ರಜೆ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದಾರೆ.
ಸಾಮಾನ್ಯವಾಗಿ ರಾಜ್ಯದಲ್ಲಿ ಏಪ್ರಿಲ್‌ನಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡಲಾಗುತ್ತದೆ. ಆದರೆ ಈ ಬಾರಿ ರಾಜ್ಯಾದ್ಯಂತ ಬೇಸಿಗೆಗೂ ಮುನ್ನ ತಾಪಮಾನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಆದ್ದರಿಂದ ಈ ಬಾರಿ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ. ಮಾರ್ಚ್‌ನಲ್ಲಿಯೇ ಶಾಲಾ ಮಕ್ಕಳಿಗೆ ಬೇಗ ಪರೀಕ್ಷೆಗಳನ್ನು ಮುಗಿಸಿ ಬಳಿಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೇಗ ಅಂದ್ರೆ ಏಪ್ರಿಲ್‌ಗೂ ಮುನ್ನ ರಜೆ ಘೋಷಿಸುವ ಸಾಧ್ಯತೆಯಿದೆ.
ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ 2025ರಲ್ಲಿ ಬೇಸಿಗೆಗೂ ಮುನ್ನ ರಣಭೀಕರ ಬಿಸಿಲು ಮುಂದುವರೆದಿದೆ. ಪರಿಣಾಮ ಜನರು ಮನೆಯಿಂದ ಹೊರಬರಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪೋಷಕರು ಗಮನ ಹರಿಸಿ ಬೇಸಿಗೆ ರಜೆ ಅವವಧಿಗೂ ಮುನ್ನ ಘೋಷಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಮುಂಬರುವ ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ, ಮಕ್ಕಳು ಸೇರಿದಂತೆ ಜನ-ಜಾನುವಾರುಗಳನ್ನು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿ ಬಳಸಬೇಕು.
