ಉದಯವಾಹಿನಿ , ಹಾಸನ: ಕಾಂಗ್ರೆಸ್ ಜಿಲ್ಲಾ ಘಟಕದಲ್ಲಿ ಎಲ್ಲವೂ ಸರಿಯಾಗುತ್ತಿದೆ ಎನ್ನುವಷ್ಟರಲ್ಲಿಯೇ ಗೊಂದಲಗಳು ಸೃಷ್ಟಿಯಾಗುತ್ತವೆ. ಈಗ ಎಲ್ಲವೂ ಸರಿಯಾಗಿಯೇ ನಡೆಯುತ್ತಿತ್ತು. ಈ ಮಧ್ಯೆ ಜಿಲ್ಲಾ ಉಸ್ತುವಾರಿಯೇ ಬೇಡ ಎಂದು ಸಚಿವ ಕೆ.ಎನ್.ರಾಜಣ್ಣ ಬರೆದುಕೊಟ್ಟಿದ್ದು, ಕಾರ್ಯಕರ್ತರಲ್ಲಿ ಅಸಮಾಧಾನ ಮನೆ ಮಾಡಿದೆ.ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಆಗುತ್ತಿದ್ದು, ಇದೀಗ ಸಚಿವ ರಾಜಣ್ಣ ಅವರು ಹಾಸನ ಜಿಲ್ಲೆಯ ಉಸ್ತುವಾರಿ ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ. ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಇದರಿಂದಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಉಸ್ತುವಾರಿ ಬೇಡವಾಗಿದ್ದರೆ, ಆರಂಭದಲ್ಲಿಯೇ ಒಪ್ಪಿಕೊಳ್ಳಬಾರದಿತ್ತು’ ಎನ್ನುವ ಮಾತುಗಳನ್ನು ಹೇಳುತ್ತಿದ್ದಾರೆ.’ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆಯುತ್ತ ಬಂದಿದೆ. ಇದುವರೆಗೆ ಕಾರ್ಯಕರ್ತರಿಗೆ ಯಾವೊಂದು ಸ್ಥಾನಮಾನ ಕಲ್ಪಿಸಿಕೊಟ್ಟಿಲ್ಲ. ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಖಾಲಿ ಇದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕ ಆಗಿಲ್ಲ, ಇನ್ನು ಕೆಡಿಪಿ, ನಗರ ಸ್ಥಳೀಯ ಸಂಸ್ಥೆಗಳಿಗೆ ನಾಮನಿರ್ದೇಶನ ಮಾಡಿಲ್ಲ. ಇಂತಹ ಸಂದರ್ಭದಲ್ಲಿ ಸಚಿವ ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಬೇಡ ಎಂದು ಹೇಳುತ್ತಿದ್ದಾರೆ.
