ಉದಯವಾಹಿನಿ, ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಏ. ೪ ರಂದು ನಗರದ ಅರಮನೆ ಮೈದಾನದ ಆವರಣದಲ್ಲಿರುವ ಪ್ರನ್ಸಸ್ ಶ್ರೈನ್ (ಗೇಟ್ ನಂ.೯)ನಲ್ಲಿ ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಎಲ್. ಭೈರಪ್ಪ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ರವರು ಭಾಗವಹಿಸಲಿದ್ದು, ಈ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು ೩೦ ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ಮತ್ತು ಕುಟುಂಬ ಪಿಂಚಣಿದಾರರು ಭಾಗವಹಿಸಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಸ್ಮರಣ ಸಂಚಿಕೆಯನ್ನೇ ಬಿಡುಗಡೆ ಮಾಡಲಿದ್ದು, ಸಚಿವ ಸಂಪುಟದ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಸರ್ಕಾರಿ ನಿವೃತ್ತ ನೌಕರರ ಹಾಗೂ ಕುಟುಂಬ ಪಿಂಚಣಿದಾರರಿಗೆ ಸಂಬಂಧಪಟ್ಟಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ತರಲಾಗುವುದು ಎಂದು ಹೇಳಿದ್ದಾರೆ. ೭ನೇ ವೇತನ ಆಯೋಗವು ತನ್ನ ವರದಿಯಲ್ಲಿ ಈ ಕೆಳಕಂಡ ಅಂಶಗಳನ್ನು ಕೂಡಲೇ ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡಿರುತ್ತದೆ.
ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ನಗದುರಹಿತ ’ಆರೋಗ್ಯ ಭಾಗ್ಯ ಯೋಜನೆ’ಯನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ೨ ವರ್ಷಗಳಿಂದಲೂ ಸಂಘವು ಒತ್ತಾಯ ತರಲಾಗಿತ್ತು. ಆದರೂ ಸರ್ಕಾರ ನಗದುರಹಿತ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಮಾಡದಿರುವ ಹಿನ್ನೆಲೆಯಲ್ಲಿ ವೇತನ ಆಯೋಗವು ಸಹ ’ಸಂಧ್ಯಾ ಕಿರಣ’ ಎಂಬ ಹೆಸರಿನ ಹೊಸ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ತನ್ನ ವರದಿಯಲ್ಲಿ ಉಲ್ಲೇಖಿಸುತ್ತದೆ.
೭೦ ವರ್ಷದಿಂದ ೮೦ ವರ್ಷದೊಳಗೆ ವಯೋಮಿತಿ ಮೀರಿದ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಅವರ ಮೂಲ ಪಿಂಚಣಿಗೆ ಶೇ ೧೦ ರಷ್ಟು ಆರ್ಥಿಕ ಸೌಲಭ್ಯವನ್ನು ನೀಡಬೇಕೆಂದು ಆಯೋಗವು ಶಿಫಾರಸ್ಸು ಮಾಡಿದೆ.
