ಉದಯವಾಹಿನಿ, ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ. ಈ ಇಬ್ಬರ ವಿರುದ್ಧ ತಕ್ಷಣವೇ ಶಿಸ್ತು ಕ್ರಮ ಜರುಗಿಸಬೇಕೆಂದು ರಾಜ್ಯ ಬಿಜೆಪಿ ಘಟಕ ಹೈಕಮಾಂಡ್‌ಗೆ ಶಿಫಾರಸು ಮಾಡಿರುವ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಉಚ್ಚಾಟಿಸುವ ಸಂಭವವಿದೆ.
ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಬಿಜೆಪಿ ಚಿಹ್ನೆಯಿಂದ ಯಶವಂತಪುರ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದಿರುವ ಇಬ್ಬರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ತಮದೇ ಹಾದಿಯಲ್ಲಿ ಹೊರಟಿದ್ದಾರೆ. ಅದರಲ್ಲೂ ಕಾಂಗ್ರೆಸ್ ಜೊತೆ ಗುರುತಿಸಿಕೊಂಡು ಬಿಜೆಪಿಗೆ ಇರಿಸುಮುರಿಸು ಉಂಟು ಮಾಡುತ್ತಿರುವ ಇಬ್ಬರನ್ನು ತಿಂಗಳಾಂತ್ಯಕ್ಕೆ ಪಕ್ಷದಿಂದಲೇ ಉಚ್ಛಾಟನೆ ಮಾಡಲು ಪಕ್ಷದ ವರಿಷ್ಠರು ಸಮತಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರ ಉಚ್ಚಾಟನೆ ಕುರಿತು ಮಾಹಿತಿ ನೀಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
