ಉದಯವಾಹಿನಿ,ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಗೂಂಡಾ ರಾಜ್ಯದ ಅಪರಾವತಾರ ಆಗಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ವಿಧಾನಸಭೆಯಲ್ಲಿ ಆರೋಪಿಸಿದರು. ಕಾನೂನು ಸುವ್ಯವಸ್ಥೆ ಕುರಿತು ನಿಲುವಳಿ ಸೂಚನೆಯನ್ನು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನಿಯಮ 69ಕ್ಕೆ ಮಾರ್ಪಾಡು ಮಾಡಿ ಅವಕಾಶ ಮಾಡಿಕೊಟ್ಟಾಗ ವಿಷಯ ಪ್ರಸ್ತಾಪಿಸಿದ ಅಶೋಕ್ ಅವರು ರಾಜ್ಯದಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ. ಲಂಗುಲಗಾಮಿಲ್ಲ. ಬಿಡದಿ ಬಳಿಯ ಟೊಯೋಟಾ ಕಂಪನಿಯ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಕಿಡಿಗೇಡಿಗಳು ಬರೆದಿದ್ದಾರೆ. ಅಲ್ಲದೆ ಶೌಚಾಲಯದಲ್ಲಿ ಕನ್ನಡಿಗರ ಬಗ್ಗೆ ಅವಾಚ್ಯ ಶಬ್ದ ಬಳಸಿ ಬರೆದಿದ್ದಾರೆ. ಇದು ನಾವೆಲ್ಲರೂ ತಲೆತಗ್ಗಿಸುವಂಥ ವಿಚಾರ ಎಂದು ಹೇಳಿದರು.
ರಾಜ್ಯಸರ್ಕಾರಕ್ಕೂ ಕಾನೂನು ಮತ್ತು ಸುವ್ಯವಸ್ಥೆಗೂ ಅಜಗಜಾಂತರ ವ್ಯತ್ಯಾಸವಿದೆ. ತಾಳಮೇಳ ಇಲ್ಲದಂತಾಗಿದೆ. ಗೃಹ ಇಲಾಖೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ನಿರ್ವಹಣೆ ಮಾಡುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಮನಗರದ ಬಿಡದಿ ಬಳಿಯ ಟೊಯೋಟಾ ಕಂಪನಿಯ ಐದಾರು ಗೋಡೆಗಳ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆಯಲಾಗಿದೆ. ಅಲ್ಲದೆ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಕನ್ನಡಿಗರ ಬಗ್ಗೆ ಅವಾಚ್ಯ ಶಬ್ದ ಬಳಸಿ ಬರೆಯಲಾಗಿದೆ. ಈ ವಿಚಾರದ ಬಗ್ಗೆ ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಈಗಾಗಲೇ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆದರೂ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
