ಉದಯವಾಹಿನಿ, ಕಲಬುರಗಿ: ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಂಡವಾಳ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದುವೇಳೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಹಿತ ರಾಹುಲ್ ಗಾಂಧಿ ಅಪಪ್ರಚಾರ ಮಾಡಿದ್ದರು. ಆದರೆ, ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಅಧಿಕಾರವಧಿಯಲ್ಲಿಯೇ ಸಂವಿಧಾನಕ್ಕೆ ಅತಿ ಹೆಚ್ಚು ತಿದ್ದುಪಡಿ ತರಲಾಗಿದೆ ಎಂದರು.
ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪಕ್ಷದ ನಾಯಕರು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳುತ್ತಾ ಬಂದಿದ್ದಾರೆ. ಇದರಿಂದ ಅಂಬೇಡ್ಕರ್ ಅವರಿಗೆ ಇವರು ಎಷ್ಟು ಗೌರವ ಕೊಡುತ್ತಾರೆ ಎಂಬುದು ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಸ್ಲಿಮರ ಓಲೈಕೆಗಾಗಿ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಅಪಾರವಾದ ಗೌರವ ಇರುವ ಕಾರಣಕ್ಕಾಗಿ ಯಾವುದೇ ಕಾರಣಕ್ಕೂ ಸಂವಿಧಾನ ತಿದ್ದುಪಡಿಗೆ ಅವಕಾಶ ನೀಡುವುದಿಲ್ಲ. ಹಾಗಾಗಿ, ತಾವು ಡಿಕೆಶಿ ಹೇಳಿಕೆಯನ್ನು ಸಾರಾಸಗಟಾಗಿ ಖಂಡಿಸುವುದಾಗಿ ವಿಜಯೇಂದ್ರ ಹೇಳಿದರು.
