ಉದಯವಾಹಿನಿ, ಬ್ಯಾಂಕಾಕ್ : ಮ್ಯಾನ್ಮಾರಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಸುಮಾರು 1000 ಕ್ಕೆ ಏರಿಕೆಯಾಗಿದ್ದು, ಈ ವರೆಗೂ 1,700 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಆಡಳಿತಾರೂಢ ಜುಂಟಾ ಸರ್ಕಾರ ತಿಳಿಸಿದೆ. ಭೂಕಂಪದಿಂದ ಉಂಟಾದ ಸಾವು ನೋವಿನ ಬಗ್ಗೆ ನಿಖರ ಮಾಹಿತಿ ಇನ್ನೂ ಸಿಕ್ಕಿಲ್ಲ, ಜನರ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಶುಕ್ರವಾರದಿಂದ 6 ಬಾರಿ ಭೂಕಂಪ ಸಂಭವಿಸಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಅವಶೇಷಗಳ ಆಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಯಾರ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಪ್ರಬಲ ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಅನೇಕ ಸಾವು-ನೋವುಗಳು ವರದಿಯಾಗಿದೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ದೃಶ್ಯಗಳು ಭಯಾನಕವಾಗಿವೆ.
