ಉದಯವಾಹಿನಿ, ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಳೆಯಿಂದ ಜನಾಕ್ರೋಶ ಯಾತ್ರೆಯನ್ನು ನಡೆಸಲಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ನಾಳೆಯಿಂದ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಆರಂಭ ಮಾಡುತ್ತಿದ್ದೇವೆ ಎಂದರು.
ನಾಳೆ ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವರು ಎಂದು ಅವರು ಹೇಳಿದರು
ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಈ ಜನಾಕ್ರೋಶ ಯಾತ್ರೆಯನ್ನು ನಡೆಸುತ್ತಿದ್ದೇವೆ. ಎಲ್ಲ ಜಿಲ್ಲೆಗಳಲ್ಲೂ ಈ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದರು.
ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಾಗ ಕಾಂಗ್ರೆಸ್‌ನವರಿಗೆ ಕೋವಿಡ್‌ನಂತಹ ವರದಿಗಳು ನೆನಪಿಗೆ ಬರುತ್ತವೆ. ಸರ್ಕಾರದ ಇಂತಹ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ ಎಂದು ವಿಜಯೇಂದ್ರ ಹೇಳಿದರು.ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತೆ ಎನ್ನುವಾಗ ಕಾಂಗ್ರೆಸ್‌ನವರಿಗೆ ಒಳಮೀಸಲಾತಿ ವಿಚಾರ ನೆನಪಿಗೆ ಬರುತ್ತದೆ ಎಂದು ವ್ಯಂಗ್ಯವಾಡಿದರು.
ಅಧಿಕಾರದಲ್ಲಿರುವ ಕಾಂಗ್ರೆಸ್ ನಾಯಕರಿಗೆ ಅಧಿಕಾರದ ಮದ ಏರಿದೆ, ಪಿತ್ತ ನೆತ್ತಿಗೇರಿದೆ. ಅಧಿಕಾರ ದರ್ಪದಿಂದ ಕಾಂಗ್ರೆಸ್‌ನವರು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಜನವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಅಧಿಕಾರ ಮದ ಏರಿದರೆ, ಪಿತ್ತ ನೆತ್ತಿಗೇರಿದರೆ ಏನಾಗಬಹುದು ಎಂಬುದು ಮುಖ್ಯಮಂತ್ರಿಗಳ ಕಾನೂನು ಸ ಲಹೆಗಾರರನ್ನು ನೋಡಿದರೆ ಗೊತ್ತಾಗುತ್ತದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ಇದು ಆತ್ಮಹತ್ಯೆ ಅಲ್ಲ ಕೊಲೆ ಈ ಬಗ್ಗೆ ಕಾನೂನು ಹೋರಾಟವನ್ನು ನಡೆಸುತ್ತೇವೆ ಎಂದು ಅವರು ಹೇಳಿದರು.
